Bible 2 India Mobile
[VER] : [KANNADA]     [PL]  [PB] 
 <<  Psalms 57 >> 

1ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

2ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.

3ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.

4ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.

5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

6ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗಿದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ

7ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.

8ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.

9ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.

10ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.

11ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


  Share Facebook  |  Share Twitter

 <<  Psalms 57 >> 


Bible2india.com
© 2010-2024
Help
Dual Panel

Laporan Masalah/Saran